ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಕಾರ್ಕಳ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಾರ್ಕಳ ವಲಯ, ಜನಜಾಗೃತಿ ವೇದಿಕೆ ಕಾರ್ಕಳ ವಲಯ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರುಗಳು ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ವಿದ್ಯಾರ್ಥಿಗಳಿಗೆ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು.ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಶ್ರೀ ಉದಯಕುಮಾರ್ ಹೆಗ್ಡೆ ಅಧ್ಯಕ್ಷರು ತಾಲೂಕು ಜನಜಾಗೃತಿ ವೇದಿಕೆ ಕಾರ್ಕಳ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಶ್ರೀ ನಂದಕುಮಾರ್ ಪಿ ಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ 15,448 ಶಾಲಾ ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮವನ್ನು ನಡೆಸಿ 18 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಮತ್ತು ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1723 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 46 ಸಾವಿರ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ. ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು ( ಉದಾ : ಕ್ಯಾನ್ಸರ್, ಕ್ಷಯ, ಹೆಚ್.ಐ.ವಿ, ಹೃದಯ ಸಂಬಂಧಿತ ಖಾಯಿಲೆಗಳು, ಮತ್ತು ಮಾದಕ ವ್ಯಸನ ) ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲಾ ಮೆಟ್ಟಿಲುಗಳು ತನ್ನಿಷ್ಟಕ್ಕೆ ಜಾರುತ್ತವೆ. ( ಮಾದಕ ವ್ಯಸನ, ಮಾಂಸ, ಮಾನಿನಿ, ಜೂಜುಜುಗಾರಿ, ಮೃಗವಿಹಾರ, ದಿವಾಸ್ವಪ್ನ ಮತ್ತು ದಿವಾಮೈಥುನ ) ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ. ಇವುಗಳಿಂದ ಹೊರಬರಲು ವಿದ್ಯಾರ್ಥಿಗಳಾದ ನಾವು ತಮ್ಮ ಜೀವನದಲ್ಲಿ ಎಚ್ಚೆತ್ತುಕೊಳ್ಳುವ ಅವಶ್ಯಕತೆಯಿದೆ. ದೃಢ ನಿರ್ಧಾರ, ಸಂಧಾನ ಕೌಶಲ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ ವ್ಯಕ್ತಿ – ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ.ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ.ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ಡಾl. ಶ್ರೀ ಗಣನಾಥ ಶೆಟ್ಟಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಸಂತೋಷ್ ಶೆಟ್ಟಿ ಅಧ್ಯಕ್ಷರು ಪೂಜಾ ಸಮಿತಿ ಹಿರ್ಗಾನ, ಶ್ರೀ ವಾಸು ಶೆಟ್ಟಿ ಅಧ್ಯಕ್ಷರು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಿರ್ಗಾನ, ಶ್ರೀ ಸಿರಿಯಣ್ಣ ಶೆಟ್ಟಿ ಗೌರವಾಧ್ಯಕ್ಷರು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಿರ್ಗಾನ, ಶ್ರೀಮತಿ ಸುನಿತಾ ಶೆಟ್ಟಿ ಮತ್ತು ಶ್ರೀಮತಿ ಗೀತಾ ಹೆಗ್ಡೆ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ವಲಯ ಇವರುಗಳು ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿ ವರ್ಗ, ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು
ವಾಣಿಜ್ಯ ವಿಭಾಗದ 150 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಸಂಸ್ಥೆಯ ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ನಿರ್ವಹಿಸಿದರು.